ಬಂಟ್ವಾಳ: ಬಾಲಕಿ ಮೇಲೆ ಅತ್ಯಾಚಾರ: ಹೆರಿಗೆ ಸಂದರ್ಭದಲ್ಲಿ ಪ್ರಕರಣ ಬಯಲು

ಬಂಟ್ವಾಳ: ಬಾಲಕಿ ಮೇಲೆ ಅತ್ಯಾಚಾರ: ಹೆರಿಗೆ ಸಂದರ್ಭದಲ್ಲಿ ಪ್ರಕರಣ ಬಯಲು

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

      ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ನಿವಾಸಿಯಾದ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ 17ರ ಹರೆಯದ ಬಾಲಕಿ ಸಂತ್ರಸ್ತೆಯಾಗಿದ್ದು, ಇದೀಗ ಆಕೆ ತಾಲೂಕಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಮನೆಯವರ ಅಸ್ಪಷ್ಟ ಮಾಹಿತಿಯ ಹಿನ್ನೆಲೆಯಲ್ಲಿ ಸಂಶಯಗೊಂಡ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ  ಪ್ರಕರಣ ಬೆಳಕಿಗೆ ಬಂದಿದೆ.

      ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ವರ್ಷದ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದನೆನ್ನಲಾಗಿದೆ. ಬಳಿಕ ಆತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ. ಆ ಬಳಿಕ ಆರೋಪಿ  ನಾಪತ್ತೆಯಾಗಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

      ಆರೋಪಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತನಿಗಾಗಿ ಪೋಲೀಸರು ಬಲೆ ಬೀಸಿದ್ದಾರೆ. ಬಂಟ್ವಾಳ ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ತನಿಖೆ ಮುಂದುವರಿಯುತ್ತಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ